ಅಕ್ರಮ ಹಣ ವರ್ಗಾವಣೆ ಪ್ರಕರಣ; ಇಡಿ ಮುಂದೆ ಹಾಜರಾದ ಡಿ.ಕೆ.ಶಿವಕುಮಾರ್
ನವದೆಹಲಿ; ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಹಣ ವರ್ಗಾವಣೆ ಸಂಬಂಧ ಡಿ.ಕೆ.ಶಿವಕುಮಾರ್ ಅವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಡಿ.ಕೆ.ಶಿವಕುಮಾರ್ ಅವರಿಗೆ ಕಳೆದ ವಾರ ಇ.ಡಿ. ಅಧಿಕಾರಿಗಳು ಸಮನ್ಸ್ ನೀಡಿ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಇ.ಡಿ. ಕಚೇರಿಗೆ ಬಂದ ಡಿ.ಕೆ.ಶಿವಕುಮಾರ್, ವಿಚಾರಣೆ ಎದುರಿಸುತ್ತಿದ್ದಾರೆ. ಯಾವ ವಿಷಯಕ್ಕೆ ಸಂಬಂಧಿಸಿ ಸಮನ್ಸ್ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ವಿಚಾರಣೆ ಮುಗಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.