Districts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ; ಯಡಿಯೂರಪ್ಪ ಸ್ಪಷ್ಟನೆ

ಶಿಕಾರಿಪುರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಸಿಎಂ ಬೊಮ್ಮಾಯಿಯವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು. ಶಿಕಾರಿಪುರದಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಹೇಳಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನನ್ನ ಪ್ರಕಾರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡೋದಿಲ್ಲ. ಸಂತೋಷ್ ಜೀ ಅವರ ಹೇಳಿಕೆ ಬಗ್ಗೆ ನಾನು ಚರ್ಚಿಸುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಶಾ ಅವರನ್ನು ಸಂಜೆ ಭೇಟಿ ಮಾಡುತ್ತೇನೆ ಎಂದ ಯಡಿಯೂರಪ್ಪ ಅವರು, ಇದು ಚುನಾವಣೆ ವರ್ಷವಾಗಿರುವುದರಿಂದ ರಾಜಕೀಯ ಪರಿಸ್ಥಿತಿ ಅವಲೋಕಿಸಲು ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಸಂಘಟನೆ ದೃಷ್ಟಿಯಿಂದ ಪ್ರಧಾನ ಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ರಾಜ್ಯದಲ್ಲಿ ಪ್ರವಾಸ ನಡೆಸುತ್ತಿದ್ದಾರೆ. ರಾಜ್ಯದ 150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚಿಸಿ ಪಕ್ಷ ಸಂಘಟಿಸಲಾಗುತ್ತದೆ ಎಂದರು.

Share Post