BengaluruDistricts

2023ರ ಚುನಾವಣೆಗೆ ಕಾಂಗ್ರೆಸ್‌ ತಯಾರಿ; ಚಿಕ್ಕಬಳ್ಳಾಪುರಕ್ಕೆ ಉಗ್ರಪ್ಪ ಉಸ್ತುವಾರಿ

ಚಿಕ್ಕಬಳ್ಳಾಪುರ; 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತಯಾರಿ ನಡೆಸುತ್ತಿದೆ. ಚುನಾವಣೆ ಇನ್ನೂ ಒಂದು ವರ್ಷವಿರುವಾಗಲೇ ಕೆಪಿಸಿಸಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಮುಖಂಡರನ್ನು ಜಿಲ್ಲಾ ಮತ್ತು ವಿಧಾನಸಭಾವಾರು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಜವಾಬ್ದಾರಿಯನ್ನು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಅವರಿಗೆ ಒಪ್ಪಿಸಲಾಗಿದೆ. ಮಾಜಿ ಸಂಸದ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರರಾಗಿಯೂ ಉಗ್ರಪ್ಪ ಕೆಲಸ ಮಾಡಿದ್ದಾರೆ. ಪರಿಶಿಷ್ಟ ಪಂಗಡದ ಪ್ರಮುಖ ಮುಖಂಡರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಮತದಾರರು ಗಣನೀಯವಾಗಿ ಇದ್ದಾರೆ. ಗೌರಿಬಿದನೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ನಿರ್ಣಾಯಕರು ಎನಿಸಿದ್ದಾರೆ. ಬಾಗೇಪಲ್ಲಿ, ಶಿಡ್ಲಘಟ್ಟ ಮತ್ತು ಚಿಂತಾಮಣಿ ವಿಧಾನಸಭಾ ಕ್ಷೇತ್ರಗಳಲ್ಲಿ ಗಣನೀಯವಾಗಿ ಇದ್ದಾರೆ. ಈ ಎಲ್ಲ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷವು ಉಗ್ರಪ್ಪ ಅವರಿಗೆ ಜವಾಬ್ದಾರಿ ನೀಡಿದೆಯೇ ಎನ್ನುವ ಚರ್ಚೆ ಕಾಂಗ್ರೆಸ್‌ನಲ್ಲಿ ಇದೆ.

ಜಿಲ್ಲೆಯಲ್ಲಿ ಹೆಚ್ಚಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರನ್ನು ಸಂಘಟಿಸುವ ದೃಷ್ಟಿಯಿಂದ ಉಗ್ರಪ್ಪ ಆಯ್ಕೆ ಜಿಲ್ಲೆಯ ಮಟ್ಟಿಗೆ ಪ್ರಮುಖವಾಗಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಪಕ್ಷವು ಉಗ್ರಪ್ಪ ಅವರಿಗೆ ಈ ಹಿಂದೆ ಚಿತ್ರದುರ್ಗ ಮತ್ತು ದಾವಣಗೆರೆಯ ಜಿಲ್ಲೆಯ ಉಸ್ತುವಾರಿ ನೀಡಿತ್ತು. ಈಗ ಚಿಕ್ಕಬಳ್ಳಾಪುರದ ಜವಾಬ್ದಾರಿ ನೀಡಿದೆ.

Share Post