ಆ.30 ಗೃಹಲಕ್ಷ್ಮೀ ಯೋಜನೆಗೆ ಚಾಲನೆ; ಮೈಸೂರಿನಲ್ಲಿ ಡಿಕೆಶಿ ಸಭೆ
ಮೈಸೂರು; ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ಈ ಸಂಬಂಧ ಚರ್ಚೆ ನಡೆಸಲು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೈಸೂರಿಗೆ ಭೇಟಿ ನೀಡಿದ್ದರು. ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಮೈಸೂರು ವಿಭಾಗೀಯ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಹೆಚ್.ಸಿ.ಮಹದೇವಪ್ಪ, ವೆಂಕಟೇಶ್, ಚಲುವರಾಯಸ್ವಾಮಿ, ಇದ್ದರು.
ಇದೇ ವೇಳೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಮಾಡಿದ್ದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಹೇಳಿದರು. ಬೆಳಗಾವಿಯಲ್ಲಿ ಮತ್ತೊಂದು ಕಾರ್ಯಕ್ರಮ ಆಯೋಜನೆ ಮಾಡುತ್ತೇವೆ ಎಂದು ಡಿಸಿಎಂ, ಆಗಸ್ಟ್ 30ರಂದು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದರು.
ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಯೋಜನೆಗೆ ಈಗಾಗಲೇ ಹಣ ಮೀಸಲಿಟ್ಟಿದ್ದು, ಹಣ ಬ್ಯಾಂಕ್‌ಗೆ ಡೆಪಾಸಿಟ್ ಆಗಿದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಗಸ್ಟ್ 30ರಂದೇ ಜಮೆ ಆಗಲಿದೆ. ಸರ್ವರ್ ಸಮಸ್ಯೆಯಾದರೆ ಮಾತ್ರ ತಡವಾಗಬಹುದು ಎಂದು ಡಿಕೆಶಿ ಹೇಳಿದ್ದಾರೆ.