Districts

ಎಲ್ಲಾ ಸರ್ಕಾರಿ ಉದ್ಯೋಗಳು ಮಾರಾಟವಾಗುತ್ತಿವೆ; ಮಾಜಿ ಸಿಎಂ ಹೆಚ್ಡಿಕೆ ಆರೋಪ

ಬೀದರ್: ರಾಜ್ಯದ ಬಡ ಮಕ್ಕಳಿಗೆ ಪಾರದರ್ಶಕವಾಗಿ ಉದ್ಯೋಗ ಕೊಡುವ ಜವಾಬ್ದಾರಿಯನ್ನು ರಾಜ್ಯ ಸರಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಅಷ್ಟೇ ಅಲ್ಲ, ಸಹಕಾರಿ ಕ್ಷೇತ್ರದಲ್ಲಿಯೂ ಸರಕಾರಿ ಉದ್ಯೋಗಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ನೇಮಕಾತಿ ಪಾರದರ್ಶಕವಾಗಿ ನಡೆಯುತ್ತಿಲ್ಲ. ಅಲ್ಲಿ ಒಂದೊಂದು ಹುದ್ದೆ 25ರಿಂದ 50 ಲಕ್ಷ ರೂಪಾಯಿವರೆಗೆ ಮಾರಾಟವಾಗುತ್ತಿದೆ. ಇದು ಎಲ್ಲ ಜಿಲ್ಲೆಗಳ ಹಾಲು ಒಕ್ಕೂಟಗಳಲ್ಲೂ ನಡೆಯುತ್ತಿದೆ. ಈ ಮಾಹಿತಿ ನನಗೆ ಮಾತ್ರವಲ್ಲದೆ, ಈವರೆಗೆ ಆಡಳಿತ ನಡೆಸಿದ, ಈಗ ನಡೆಸುತ್ತಿರುವ ಪ್ರತಿಯೊಬ್ಬರಿಗೂ ಗೊತ್ತಿದೆ ಎಂದರು.

ಎಲ್ಲ ಇಲಾಖೆಗಳಲ್ಲಿಯೂ ಪಾರದರ್ಶಕವಾಗಿ ನೇಮಕಾತಿ ನಡೆಯುತ್ತಿಲ್ಲ. ಕಮೀಷನ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ವಸ್ತುಸ್ಥಿತಿ ಹೀಗಿರುವಾಗ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಈ ಅನ್ಯಾಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಪಾರದರ್ಶಕ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಮುಖ್ಯಮಂತ್ರಿ ಕೈಗೊಳ್ಳಬೇಕು ಹಾಗೂ ಈ ಬಗ್ಗೆ ಸಹಕಾರಿ ಸಚಿವರು ವಾಸ್ತವಾಂಶವನ್ನು ಜನರ ಮುಂದೆ ಇಡಲಿ ಎಂದು ಅವರು ಒತ್ತಾಯಿಸಿದರು.

Share Post