IT RAID; ಪ್ರಿಯಾಂಕ್ ಖರ್ಗೆ ಬೆಂಬಲಿಗನ ಮೇಲೆ ಐಟಿ ರೇಡ್
ಕಲಬುರಗಿ; ಚುನಾವಣೆ ಹತ್ತಿರವಾಗುತ್ತಿದೆ. ಮತದಾನಕ್ಕೆ ಇನ್ನು ಮೂರು ದಿನ ಬಾಕಿ ಇದೆ. ಈಗ ಚುನಾವಣಾ ಅಕ್ರಮಗಳು ಜಾಸ್ತಿಯಾಗುತ್ತವೆ. ಇನ್ನು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಸಲಾಗುತ್ತದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ. ಅದು ನಿಜವೋ ಎಂಬಂತೆ ಕಳೆದ ರಾತ್ರಿ ಚಿತ್ತಾಪುರ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗನ ಮನೆ ಮೇಲೆ ಐಟಿ ದಾಳಿ ನಡೆದಿದೆ.
ಅರವಿಂದ್ ಚೌಹಾಣ್ ಅವರ ಮನೆ, ಹೋಟೆಲ್ ಹಾಗೂ ಸ್ಟೋನ್ ಕ್ರಷರ್ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕಳೆದ ತಡರಾತ್ರಿ ದಾಳಿ ನಡೆದಿದ್ದು, ತೀವ್ರ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಏನು ಸಿಕ್ಕಿದೆ ಎಂಬುದರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಅರವಿಂದ್ ಚೌಹಾಣ್ ಅವರು, ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯರಾಗಿದ್ದಾರೆ. ಬಿಜೆಪಿಯಲ್ಲಿದ್ದ ಇವರು ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಪರ ಪ್ರಚಾರ ನಡೆಸುತ್ತಿದ್ದರು.