ಎಂಇಎಸ್ ಪುಂಡಾಟಿಕೆ: ಕರವೇ ಕಾರ್ಯಕರ್ತರ ಬಣದಿಂದ ಹೋರಾಟ
ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ್ದನ್ನು ವಿರೋಧಿಸಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ಹಿರೇಬಾಗೇವಾಡಿ ಟೋಲ್ ಬಳಿಯೇ ತಡೆದಿದ್ದಾರೆ. ಕರವೇ ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸರು ಬಂಧಿಸಿದ್ದಾರೆ.
ಹಿರೇಬಾಗೇವಾಡಿ ಬಳಿ ಪೊಲೀಸರು ತಡೆದಿದ್ದರಿಂದ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲೇ ಮಲಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಆದರೆ ಪೊಲೀಸರು ಅವರನ್ನು ತಡೆಯುವ ಪ್ರಯತ್ನ ಮಾಡಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಬಸ್‌ಗಳಲ್ಲಿ ಬೇರೆಡೆಗೆ ಸಾಗಿಸಿದರು.
ಮೂರು ದಿನದ ಹಿಂದೆ ಇಲ್ಲಿನ ಆನಗೋಳದ ಕನಕದಾಸ ಕಾಲೋನಿಯಲ್ಲಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಎಂಇಎಸ್ ಕಾರ್ಯಕರ್ತರು ಭಗ್ನಗೊಳಿಸಿದ್ದರು. ಇದನ್ನು ವಿರೋಧಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ, ಸುವರ್ಣಸೌಧ ಮುತ್ತಿಗೆಗೆ ಕರವೇ ಕಾರ್ಯಕರ್ತರು ತೀರ್ಮಾನಿಸಿದ್ದರು. ಆದರೆ, ಹಿಗೇಬಾಗೇವಾಡಿ ಬಳಿಯೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ.