ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ; ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ
ಹುಬ್ಬಳ್ಳಿ; ಪ್ರವಾದಿ ಮಹಮ್ಮದ್ ಬಗ್ಗೆ ಬಿಜೆಪಿಯ ನೂಪುರ್ ಶರ್ಮಾ ಅವಹೇಳನಕಾರಿ ಹೇಳಿಕೆ ಖಂಡಿಸಿ ದೇಶದ ಕೆಲವೆಡೆ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರ ವಹಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈಗಾಗಲೇ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಂಡು ಕಟ್ಟೆಚ್ಚರದಿಂದ ಇರಲು ಸೂಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಆದರೂ ಜಾಗ್ರತೆಯಿಂದ ಇರಬೇಕೆಂದು ಪೊಲೀಸ್ ಇಲಾಖೆಗೆ ಸೂಚನೆ ಕೊಡಲಾಗಿದೆ. ಪ್ರತಿಯೊಂದು ಠಾಣೆಯ ಸಿಪಿಐ ಅವರನ್ನು ಉಸ್ತುವಾರಿ ಮಾಡಿ, ಎಲ್ಲ ಸಮುದಾಯದವರ ಜತೆ ಸೌಹಾರ್ದಯುತ ವಾತಾವರಣ ನಿರ್ಮಿಸುವಂತೆ ಸೂಚಿಸಲಾಗಿದೆ. ಹುಧಾ ಪೊಲೀಸ್ ಕಮಿಷನರ್ ಹಾಗೂ ಧಾರವಾಡ ಎಸ್ಪಿ ಜೊತೆಯೂ ಈ ಕುರಿತು ಚರ್ಚಿಸಿದ್ದೇನೆ ಎಂದರು.