ನ.6ಕ್ಕೆ ಖರ್ಗೆ ರಾಜ್ಯಕ್ಕೆ ಆಗಮನ; ಅದ್ದೂರಿ ಸ್ವಾಗತಕ್ಕೆ ಕೆಪಿಸಿಸಿ ಸಿದ್ಧತೆ
ಶಿವಮೊಗ್ಗ; ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ನವೆಂಬರ್ 6ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಎಐಸಿಸಿ ನೂತನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ನವೆಂಬರ್ 6ರಂದು ಬೆಂಗಳೂರಿಗೆ ಬರುವುದಾಗಿ ಹೇಳಿದ್ದಾರೆ. ಹೀಗಾಗಿ ಅವರಿಗೆ ಅದ್ದೂರಿ ಸ್ವಾಗತ ಕೋರಲು ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದರು. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದು ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ. ಬ್ಲಾಕ್ ಮಟ್ಟದ ಅಧ್ಯಕ್ಷರಾಗಿದ್ದವರು ಈಗ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದಕ್ಕೆ ಇದೇ ಉದಾಹರಣೆ ಎಂದು ಅವರು ಹೇಳಿದರು.