ಮೇಕೆದಾಟು ವಿಚಾರದಲ್ಲಿ ಸರ್ಕಾರ ಮೀನಾಮೇಷ-ಸಿದ್ದರಾಮಯ್ಯ
ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಇದೇ ತಿಂಗಳು ೯ರಂದು ಕಾಂಗ್ರೆಸ್ ಪಾದಯಾತ್ರೆ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಇದಕ್ಕೆ ವಿರೋಧ ಪಕ್ಷಗಳಿಂದ ಟೀಕಾ ಪ್ರಹಾರ ವ್ಯಕ್ತವಾಗುತ್ತಿದೆ. ಇಂದು ಬೆಳಗ್ಗೆ ಡಿ.ಕೆ ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಂತರ ಅಲ್ಲಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.
ಇನ್ನು ಈ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಗರಂ ಆಗಿದ್ದಾರೆ.
ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಬಿಜೆಪಿ ವಿರುದ್ಧ ಕಿಡಿಕಾರಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ಬಿಜೆಪಿ ಮೀನಾಮೇಷ ಎಣಿಸುತ್ತಿದ್ದಾರೆ. ರಾಜಕೀಯ ದೃಷ್ಟಿಯಿಂದ ಬಿಜೆಪಿ ಅವರು ತಮಿಳುನಾಡು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಸುಖಾಸುಮ್ಮನೆ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಇನ್ನು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಗಿದೆ. ಆದರೆ ಅನಾಗತ್ಯವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಈಗ ತಮಿಳುನಾಡಿಗೆ ಮೇಕೆದಾಟು ಯೋಜನೆ ತಡೆಯಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.