Districts

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ; ಮುಗಿಲು ಮುಟ್ಟಿದ ಆಕ್ರಂದನ

ಶಿವಮೊಗ್ಗ; ಕಳೆದ ರಾತ್ರಿ ಶಿವಮೊಗ್ಗದಲ್ಲಿ ನಡೆದ ಹಿಂದೂಪರ ಸಂಘಟನೆ ಕಾರ್ಯಕರ್ತನ ಕೊಲೆ ಪ್ರಕರಣದಿಂದಾಗಿ, ಶಿವಮೊಗ್ಗ ಜಿಲ್ಲೆಯಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಸದ್ಯ ಬಿಗಿ ಬಂದೋಬಸ್ತ್‌ ಏರ್ಪಡಿಸಿರುವುದರಿಂದ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಬಡಾವಣೆಯಲ್ಲಿ ಸಿಗೇಹಟ್ಟಿ ಬಡಾವಣೆ ನಿವಾಸಿ ಹರ್ಷ ಎಂಬಾತನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು, ಭಜರಂಗ ದಳ ಕಾರ್ಯಕರ್ತ ಹರ್ಷನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿತ್ತು. ಹರ್ಷ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡುತ್ತಿರುವುದನ್ನು ನೋಡಿದ ಸ್ಥಳೀಯರು ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಿದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಹರ್ಷ ಸಾವನ್ನಪ್ಪಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಹರ್ಷ ಅವರ ಕುಟುಂಬಸ್ಥರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಬೆಳಗ್ಗೆ ಭೇಟಿಯಾಗಿ ಸಾಂತ್ವನ ಹೇಳಿದರು. ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ಪೊಲೀಸರು ವ್ಯಾಪಕ ಶೋಧ ನಡೆಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.


ಇನ್ನು ರಾತ್ರಿ ಹರ್ಷನ ಹತ್ಯೆ ಸುದ್ದಿ ಗೊತ್ತಾಗುತ್ತಿದ್ದಂತೆ ಶಿವಮೊಗ್ಗದ ವಿವಿಧ ಬಡಾವಣೆಯಲ್ಲಿ ಉದ್ರಿಕ್ತ ಗುಂಪುಗಳಿಂದ ಕಲ್ಲು ತೂರಾಟ ನಡೆದಿದೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಭಜರಂಗ ದಳ ಕಾರ್ಯಕರ್ತನ ಹತ್ಯೆ ಸುದ್ದಿ ಮಲೆನಾಡಿನಾದ್ಯಂತ ಕಾಡ್ಗಿಚ್ಚಿನಂತೆ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕೆ ಬಂದ ಎಸ್​ಪಿ ಲಕ್ಷ್ಮಿಪ್ರಸಾದ್ ಮತ್ತು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಪರಿಶೀಲನೆ ನಡೆಸಿದರು. ಸೂಕ್ಷ್ಮಪ್ರದೇಶಗಳಲ್ಲಿ ರೌಂಡ್ಸ್ ಹಾಕಿದರು. ಮುಂಜಾಗ್ರತಾ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದೇ ವೇಳೆ, ಮಾತಾಡಿದ ಡಿಸಿ ಡಾ. ಸೆಲ್ವಮಣಿ, ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು. ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ ಅಂತಾ ಮನವಿ ಮಾಡಿದ್ದಾರೆ.

Share Post