ಸಂತೋಷ್ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ
ಕಲಬುರಗಿ: ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಝದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಒತ್ತಾಯ ಮಾಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಸಂತೋಷ ಪಾಟೀಲ ಆತ್ಮಹತ್ಯೆಗೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಹೊಣೆ. ಡೆತ್‌ನೋಟ್‌ನಲ್ಲಿ ಸಚಿವ ಈಶ್ವರಪ್ಪನವರ ಹೆಸರು ಉಲ್ಲೇಖವಿದೆ. ಆದ್ದರಿಂದ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ಶೇಕಡಾ 40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿರುವ ಬಗ್ಗೆ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಆದರೂ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಪ್ರತಿಯೊಂದಕ್ಕೂ ಸರ್ಕಾರ ದಾಖಲೆ ಕೇಳುತ್ತಿದೆ. ಈಗ ಒಂದು ಜೀವ ಹೋಗಿದೆ. ಇದಕ್ಕಿಂದ ಪುರಾವೆ ಬೇಕಾ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್‌ಎಸ್‌ಎಸ್ ಕೈಗೊಂಬೆಯಾಗಿದ್ದು, ಅಸಹಾಯಕರಾಗಿದ್ದಾರೆ. ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದವರ ಮೇಲೆ ಕ್ರಮ ತೆಗೆದುಕೊಳ್ಳದ ಮುಖ್ಯಮಂತ್ರಿ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರಾ? ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನರ ಹಿತ ಬಲಿ ಕೊಡುತ್ತಿದ್ದಾರೆ ಎಂದು ದೂರಿದರು.