ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಅವಾಂತರ; ನಿರಾಣಿ ನೇತೃತ್ವದಲ್ಲಿ ಸಭೆ
ಕಲಬುರಗಿ; ಕಲಬುರಗಿ ಜಿಲ್ಲೆಯಲ್ಲೂ ಮಳೆಯ ಅವಾಂತರ ಜಾಸ್ತಿಯಾಗಿದೆ. ಅಲ್ಲಲ್ಲಿ ಮಳೆಯಿಂದಾಗಿ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರು ಕಲಬುರಗಿಯ ಡಿ.ಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆ ನಂತರ ಮಾತನಾಡಿದ ಸಚಿವರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗಿದೆ. ರೈತರ ಬೆಳೆ ನಷ್ಟ, ಮನೆ ಕಳೆದುಕೊಂಡ ನಿರಾಶ್ರಿತರಿಗೆ ಒದಗಿಸಬೇಕಾದ ಸೌಲಭ್ಯಗಳು, ಜಾನುವಾರುಗಳಿಗೆ ಮೇವು, ಸಂತ್ರಸ್ತರಿಗೆ ಪರಿಹಾರವನ್ನು ನೀಡುವ ಮತ್ತು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಇನ್ನು ಈ ಸಭೆಯಲ್ಲಿ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಸಂಸದ ಡಾ.ಉಮೇಶ ಜಾಧವ, ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಶಾಸಕ ಸುನೀಲ ವಲ್ಯಾಪೂರೆ, ಡಿ.ಸಿ.ಯಶವಂತ ವಿ. ಗುರುಕರ್, ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ, ಎಸ್.ಪಿ.ಇಶಾ ಪಂತ್, ಮಹಾನಗರ ಪಾಲಿಕೆ ಅಯುಕ್ತ ಭುವನೇಶ ಪಾಟೀಲ ದೇವಿದಾಸ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಲಿ ಹಾಜರಿದ್ದರು.