ಸಂತೋಷ್ ಆತ್ಮಹತ್ಯೆ ಪ್ರಕರಣ; ಶಿವಮೊಗ್ಗದಲ್ಲಿ ಈಶ್ವರಪ್ಪ ಮನೆಗೆ ಮುತ್ತಿಗೆ
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಶುರು ಮಾಡಿದ್ದಾರೆ. ಶಿವಮೊಗ್ಗದಲ್ಲೂ ಕೂಡಾ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಇಲ್ಲಿನ ಮಲ್ಲೇಶ್ವರ ನಗರದಲ್ಲಿರುವ ಸಚಿವ ಈಶ್ವರಪ್ಪ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ಮಾಧ್ಯಮಗಳಿಗೆ ಡೆತ್ನೋಟ್ ನ್ನು ವಾಟ್ಸ್ಆ್ಯಪ್ ಮೂಲಕ ಕಳುಹಿಸಿದ್ದಾರೆ. ಇದರಲ್ಲಿ ಸಚಿವ ಈಶ್ವರಪ್ಪ ಅವರು ನನ್ನ ಸಾವಿಗೆ ಕಾರಣ ಎಂದು ನಮೂದಿಸಿದ್ದಾರೆ. ಹೀಗಾಗಿ, ಗುತ್ತಿಗೆದಾರನ ಸಾವಿಗೆ ಕಾರಣರಾದ ಈಶ್ವರಪ್ಪ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು.
ಅಲ್ಲದೇ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಿ ಆಗ್ರಹಿಸಲಾಗಿದೆ. ಈಶ್ವರಪ್ಪ ಅವರ ಮನೆಗೆ ನುಗ್ಗಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಚಿವರ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.