Districts

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ: ಸಚಿವ ನಿರಾಣಿ ಮನವಿ

ಬೆಳಗಾವಿ: ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಮನವಿ ಮಾಡಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿಯ ಹಿಂಡಲಗದಲ್ಲಿರುವ ಸಂತೋಷ್ ಪಾಟೀಲ್ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬ ವರ್ಗದವರಿಗೆ ಸಾಂತ್ವಾನ ಹೇಳಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಘಟನೆ ನಡೆಯಬಾರದಿತ್ತು. ಆದರೂ ನಡೆದಿರುವುದು ಅತ್ಯಂತ ದುರದೃಷ್ಟಕರ. ಏಕಾಯಿತು? ಎಂಬುದು ಈಗ ಅನಗತ್ಯ. ತನಿಖೆ ನಂತರ ಎಲ್ಲ ಸತ್ಯಾಂಶ ಗೊತ್ತಾಗಲಿದೆ ಎಂದು ಹೇಳಿದರು. ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಪ್ಐಆರ್ ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ನಾನು ಇದರ ಬಗ್ಗೆ ಮಾತನಾಡಿದರೆ ತಪ್ಪಾಗುತ್ತದೆ. ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಯಲಿದ್ದು, ಸತ್ಯಾಂಶ ಎಲ್ಲರಿಗೂ ಗೊತ್ತಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ತನಿಖೆಯಲ್ಲಿ ಸರ್ಕಾರ ಎಲ್ಲಿಯೂ ಕೂಡ ಹಸ್ತಕ್ಷೇಪ ಮಾಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವರಾದ ಅರಗ ಜ್ಞಾನೇಂದ್ರ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.

 

Share Post