15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊವಿಡ್ ವ್ಯಾಕ್ಸಿನ್: ದೇಶಾದ್ಯಂತ ಚಾಲನೆ
ಬೆಂಗಳೂರು ದೇಶಾದ್ಯಂತ ಇಂದು 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ರಾಜ್ಯದಲ್ಲೂ ಕೂಡಾ ಕೊವಿನ್ ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೋಂದಾಯಿಸಿಕೊಂಡ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಸ್ಥಳೀಯ ಶಾಸಕರು ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 15 ರಿಂದ 18 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಮೂಡಲಪಾಳ್ಯ ವಾರ್ಡ್‌ನ ಪಾಲಿಕೆ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, 15 ರಿಂದ 18 ವರ್ಷದೊಳಗಿನ ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಸಚಿವ ಸೋಮಶೇಖರ್, ಮೈಸೂರು ಜಿಲ್ಲೆಯ ಒಂದೂವರೆ ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು. ಜನವರಿ ಐದರಿಂದ ಸುಮಾರು 200 ತಂಡಗಳು ಗ್ರಾಮೀಣ ಪ್ರದೇಶಗಳಿಗೆ ತೆರಳಲಿವೆ. ಪ್ರತಿ ಹಳ್ಳಿಗೂ ಹೋಗಿ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದರು.
ಇನ್ನು ಶಾಸಕ ಹಾಗೂ ಮಾಜಿ ಸಚಿವ ಜಿ.ಪರಮೇಶ್ವರ್ ಅವರು ತುಮಕೂರು8 ಜಿಲ್ಲೆ ಕೊರಟಗೆರೆಯಲ್ಲಿ ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಇಲ್ಲೂ ಕೂಡಾ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.