ಸೋನಿಯಾಗೆ ಕೊರೊನಾ ಪಾಸಿಟಿವ್; ಇಡಿ ವಿಚಾರಣೆಗೆ ಹಾಜರಾಗೋದು ಡೌಟ್
ನವದೆಹಲಿ; ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನು ಕಾಂಗ್ರೆಸ್ ಪಕ್ಷದ ನಾಯಕ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ. ಸೋನಿಯಾ ಗಾಂಧಿಯವರಿಗೆ ಜ್ವರ ಸೇರಿದಂತೆ ಕೆಲವು ಕೊರೊನಾದ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಸದ್ಯ ಅವರು ಮನೆಯಲ್ಲೇ ಪ್ರತೇಕವಾಸದಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸುರ್ಜೆವಾಲಾ ಮಾಹಿತಿ ನೀಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ನಿನ್ನೆ ಸಮನ್ಸ್ ಜಾರಿ ಮಾಡಿತ್ತು. ಜೂನ್ 8ರಂದು ಸೋನಿಯಾ ಗಾಂಧಿ ಅವರು ಇ.ಡಿ. ಕಚೇರಿಗೆ ಹೋಗುವುದಾಗಿ ತಿಳಿಸಿದ್ದರು. ಆದರೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ವಿಚಾರಣೆಗೆ ಹಾಜರಾಗುವುದು ಅನುಮಾನ ಎಂದು ಹೇಳಲಾಗುತ್ತಿದೆ.