ಒಮಿಕ್ರೋನ್ ಬಗ್ಗೆ ಎಚ್ಚರಿಕೆ ಇರಲಿ; ಪ್ರಧಾನಿ ನರೇಂದ್ರ ಮೋದಿ ಕರೆ
ನವದೆಹಲಿ: ದಕ್ಷಿಣ ಆಫ್ರಿಕಾದ ರೂಪಾಂತರಿ ತಳಿ ಒಮಿಕ್ರೋನ್ ಬಗ್ಗೆ ದೇಶದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ಅಧಿಕಾರಿಗಳು ವರ್ಚ್ಯುಯಲ್ ಸಭೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ತೀವ್ರ ನಿಗಾ ವಹಿಸಬೇಕು. ಯಾವ ದೇಶದಲ್ಲಿ ಹೆಚ್ಚು ಪ್ರಕರಣಗಳಿವೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕಾಗಿದೆ. ಆ ದೇಶಗಳಿಂದ ಬರುವ ವಿಮಾನಗಳಿಗೆ ನಿರ್ಬಂಧ ವಿಧಿಸುವ ಕುರಿತು ಚರ್ಚೆ ನಡೆದಿದೆ. ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ವಿಶ್ವವನ್ನೇ ಕಂಗೆಡಿಸಿರುವ ಹೊಸ ತಳಿಯ ಒಮಿಕ್ರೋನ್ ಕೊರೊನಾ ಸೋಂಕಿನ ಹರಡುವಿಕೆ ಕೆಲವು ರಾಷ್ಟ್ರಗಳಲ್ಲಿ ಹೆಚ್ಚಾಗಿದೆ. ಇದು ಬಹುಬೇಗ ಹರಡುವ ವೈರಾಣುವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದರು.