114 ಒಮಿಕ್ರಾನ್ ಸೋಂಕಿತರು ಗುಣಮುಖ; 244 ಸೋಂಕಿತರಿಗೆ ಚಿಕಿತ್ಸೆ
ನವದೆಹಲಿ: ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ ಸಮಾಧಾನಕರ ವಿಚಾರ ಎಂದರೆ ದೇಶದಲ್ಲಿ ಒಮಿಕ್ರಾನ್ ಸೋಂಕಿಗೆ ಒಳಗಾಗಿದ್ದ 114 ಮಂದಿ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಉಳಿದವರು ಕೂಡಾ ಚೇತರಿಸಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಈ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ ಇದುವರೆಗೆ 358 ಮಂದಿಯಲ್ಲಿ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿತ್ತು. ಆದರೆ ಈಗ 244 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ 31, ಮಹಾರಾಷ್ಟ್ರದಲ್ಲಿ 88, ದೆಹಲಿ 67, ತೆಲಂಗಾಣ 38, ತಮಿಳುನಾಡು 34, ಗುಜರಾತ್ 30, ಕೇರಳ 27 ಹಾಗೂ ರಾಜಸ್ಥಾನದಲ್ಲಿ 22 ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 122 ಹೊಸ ಪ್ರಕರಣ ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.