BengaluruHealth

ಸರ್ಕಾರದ ಮುಂದೆ ಲಾಕ್‌ಡೌನ್‌ ಪ್ರಸ್ತಾಪ ಇಲ್ಲ; ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ಲಾಕ್‌ಡೌನ್‌ ಪ್ರಸ್ತಾಪ ಇಲ್ಲ. ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ನ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಸುಮಾರು 12 ದೇಶಗಳಲ್ಲಿ ಕಂಡುಬಂದಿದೆ. ಕಳೆದ 12-13 ದಿನಗಳಲ್ಲಿ ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೇಶಗಳಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಅವರು ಯಾರನ್ನು ಸಂಪರ್ಕಿಸಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದ್ದು, ಪ್ರಾಥಮಿಕ ಸಂಪರ್ಕಿತರ ಮೇಲೂ ನಿಗಾ ಇಡಲಾಗಿದೆ ಎಂದು ಸುಧಾಕರ್‌ ಹೇಳಿದ್ದಾರೆ.

ಹೊಸ ಕೊರೋನಾ ರೂಪಾಂತರಿ ಒಮಿಕ್ರಾನ್, ಮೊದಲು ನಾಲ್ಕು ದೇಶಗಳಲ್ಲಿ ಕಂಡುಬಂದಿತ್ತು. ಈಗ ಒಟ್ಟು 12 ದೇಶಗಳಲ್ಲಿ ಸೋಂಕಿತರು ಪತ್ತೆಯಾಗಿದೆ. ಹೀಗಾಗಿ ಭಾರತದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಮೂಲಕ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ರಾಜ್ಯ ಸರ್ಕಾರ ಕೂಡ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.

ಮಂಗಳವಾರ ಆರೋಗ್ಯ ಇಲಾಖೆಯಿಂದ ವಿಶೇಷ ಸಭೆ ನಡೆಯಲಿದ್ದು, ಎಲ್ಲಾ ಹಿರಿಯ ಅಧಿಕಾರಿಗಳು, ವೈದ್ಯರು, ತಾಂತ್ರಿಕ ಸಲಹಾ ಸಮಿತಿ ತಜ್ಞರು ಪಾಲ್ಗೊಳ್ಳಲಿದ್ದಾರೆ. ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಸರ್ಕಾರ ನೀಡುವ ಮಾರ್ಗಸೂಚಿ, ಅದರ ಪಾಲನೆ ಹೇಗಾಗಬೇಕು ಎಂಬುದರ ಬಗ್ಗೆ ಇಲ್ಲಿ ಚರ್ಚೆಯಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

‌   ಕೋವಿಡ್ ನಿಂದ ಈಗಾಗಲೇ ಜನರು ನೊಂದಿದ್ದು, ಬಹಳ ನಷ್ಟ ಅನುಭವಿಸಿದ್ದಾರೆ. ಆದ್ದರಿಂದ ಜನರು ಆತಂಕಕ್ಕೆ ಒಳಗಾಗುವಂತೆ ಮಾಡಬಾರದು. ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳು ತಪ್ಪು ಸುದ್ದಿ ಹರಡಬಾರದು. ಈಗ ಲಾಕ್ ಡೌನ್ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ಹೀಗಾಗಿ ಆ ಬಗ್ಗೆ ಹೆದರಿಸುವ ಕೆಲಸ ಆಗಬಾರದು. ಆದರೆ ವೈರಾಣು ಕುರಿತು ಜಾಗೃತಿ ಕಾರ್ಯಗಳು ಹೆಚ್ಚಾಗಿ ನಡೆಯಬೇಕು ಎಂದರು.

ಹೊಸ ವೈರಾಣು ಡೆಲ್ಟಾ ರೂಪಾಂತರಿಯಷ್ಟು ಅಪಾಯಕಾರಿ ಅಲ್ಲ ಎಂದು ಕೆಲ ತಜ್ಞರು ತಿಳಿಸಿದ್ದಾರೆ. ಆದರೆ ವೈರಾಣು ವರ್ತನೆ ಬಗ್ಗೆ ಜಿನೊಮಿಕ್ ಸೀಕ್ವೆನ್ಸಿಂಗ್ ಆದ ನಂತರ ನಿಖರ ಮಾಹಿತಿ ಲಭ್ಯವಾಗಲಿದೆ. ಡಿಸೆಂಬರ್ 1 ರ ನಂತರ ಓಮಿಕ್ರಾನ್ ಅಧ್ಯಯನದ ವಿವರಗಳು ದೊರೆಯಲಿವೆ ಎಂದು ಮಾಹಿತಿ ನೀಡಿದರು.

Share Post