HealthNational

ವಿದೇಶಗಳಿಂದ ಬರುವವರಿಗೆ RTPCR ಟೆಸ್ಟ್‌ ಕಡ್ಡಾಯ: ಸಚಿವ ಕೆ.ಸುಧಾಕರ್‌

ಬೆಂಗಳೂರು: ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆಯನ್ನು ಎಲ್ಲರೂ ಪಡೆಯುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುಧಾಕರ್‌, ದಕ್ಷಿಣ ಆಫ್ರಿಕಾ, ಇಸ್ರೇಲ್, ಹಾಂಗ್ ಕಾಂಗ್ ಮುಂತಾದ ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು ಕಾಣಿಸಿದೆ. ಆದರೆ ರಾಜ್ಯದಲ್ಲಿ ಎಲ್ಲೂ ಇದು ಕಂಡುಬಂದಿಲ್ಲ. ಇದಕ್ಕಾಗಿ ನಿನ್ನೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗಿದೆ. ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೋವಿಡ್ ವರದಿ ತಂದಿದ್ದರೂ ಕೂಡ, ಅವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು. ಅವರಿಗೆ ನೆಗೆಟಿವ್ ಬಂದರೆ ಮನೆಯಲ್ಲೇ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಈ ಸಮಯದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುವುದು. ಏಳು ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು. ಅವರಿಗೆ ರೋಗದ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ವಿಮಾನ ನಿಲ್ದಾಣಗಳಲ್ಲಿ ಕ್ರಮ ವಹಿಸುವ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ನಮ್ಮ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೂ ಅಲ್ಲಿ ನಿಯೋಜಿಸಲಾಗಿದೆ. ಹೊಸ ವೈರಾಣು ಹರಡುವ ವೇಗ ಹೆಚ್ಚಿದೆ ಎಂದು ತಿಳಿದುಬಂದಿದೆ. ಆದರೆ ಇದ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಹೆಚ್ಚು ಆತಂಕಪಡಬೇಕಿಲ್ಲ. ನಮ್ಮ ದೇಶದಲ್ಲಿ ಈ ರೀತಿಯ ಹೊಸ ವೈರಾಣು ಕಂಡುಬಂದಿಲ್ಲ. ಎಲ್ಲರೂ ಕೋವಿಡ್ ನ ಎರಡೂ ಡೋಸ್ ಗಳನ್ನು ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದರು.

Share Post