ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಚುನಾವಣೆಗೆ ಕಾರ್ಯತಂತ್ರ; ಮೇ 20, 21 ರಂದು ಬಿಜೆಪಿ ಅಧಿವೇಶನ
ನವದೆಹಲಿ: ಮುಂದಿನ ವರ್ಷ ಕರ್ನಾಟಕ ಸೇರಿ ಹಲವು ರಾಜ್ಯಗಳ ಚುನಾವಣೆ ಇದೆ. ಈ ಹಿನ್ನೆಲೆಯಲ್ಲಿ ಗೆಲುವಿಗಾಗಿ ತಂತ್ರಗಾರಿಕೆ ರೂಪಿಸಲು ಹಾಗೂ ಆ ರಾಜ್ಯಗಳಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿ ಅಧಿವೇಶನ ಕರೆದಿದೆ. ಜೈಪುರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಮೇ 20 ಮತ್ತು 21 ರಂದು ಎಲ್ಲಾ ರಾಜ್ಯಗಳ ಸಂಘಟನಾ ನಾಯಕರ ಅಧಿವೇಶನ ನಡೆಯಲಿದೆ.
ಈ ಅಧಿವೇಶನದ ಅಧ್ಯಕ್ಷತೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ವಹಿಸಿಕೊಳ್ಳಲಿದ್ದಾರೆ. ಪಕ್ಷದ ರಾಜ್ಯ ಘಟಕಗಳ ಅಧ್ಯಕ್ಷರು, ಉಸ್ತುವಾರಿಗಳು ಮತ್ತು ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎರಡು ದಿನದ ಅಧಿವೇಶನದ ಪೈಕಿ, ಒಂದು ದಿನ ಅಧಿವೇಶನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಎಲ್ಲ ರಾಜ್ಯಗಳ ಬಿಜೆಪಿ ನಾಯಕರ ಸಭೆಯು ಮೇ 20 ರಂದು ನಡೆಯಲಿದೆ. ಮರುದಿನ ಎಲ್ಲ ರಾಜ್ಯ ಪ್ರಧಾನ ಸಂಘಟನಾ ಕಾರ್ಯದರ್ಶಿಗಳು ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ. ರಾಜ್ಯಗಳಲ್ಲಿ ಪಕ್ಷವು ಕೈಗೊಂಡಿರುವ ರಾಜಕೀಯ ಚಟುವಟಿಕೆಗಳ ಬಗ್ಗೆ ವರದಿ ತರುವಂತೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ರಾಜ್ಯ ಘಟಕಗಳ ಅಧ್ಯಕ್ಷರು ಮತ್ತು ಪ್ರಧಾನ ಸಂಘಟನಾ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.