National

ಹಿಜಾಬ್‌ ವಿವಾದ; ಹೈಕೋರ್ಟ್‌ ತೀರ್ಪು ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ನವದೆಹಲಿ;  ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್‌ ಒಪ್ಪಿಗೆ ಸೂಚಿಸಿದೆ.   ಕರ್ನಾಟಕ ಹೈಕೋರ್ಟ್ ನೀಡಿರುವ ಮಹತ್ವದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಹೈಕೋರ್ಟ್ ಮಾರ್ಚ್ 15ರಂದು ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಆಚರಣೆಯಡಿ ಬರುವುದಿಲ್ಲ ಎಂದು ತೀರ್ಪು ನೀಡಿತ್ತು.

ವಕೀಲ ಪ್ರಶಾಂತ್ ಭೂಷಣ್ ಅವರು ಹಿಜಾಬ್​ ವಿವಾದದ ಕುರಿತು ಮಾರ್ಚ್‌ನಲ್ಲೇ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆ ವಿಳಂಬವಾಗುತ್ತಿದೆ ಎಂದು ಪ್ರಸ್ತಾಪಿಸಿದರು. ಈ ವೇಳೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠವು ಮುಂದಿನ ವಾರದಿಂದ ವಿಚಾರಣೆ ನಡೆಸುವುದಾಗಿ ಹೇಳಿದೆ.

ಈ ವರ್ಷದ ಜನವರಿಯಲ್ಲಿ ಉಡುಪಿ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿಗೆ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ​ ಬರುವುದನ್ನು ವಿರೋಧಿಸಿ ಕೆಲವು ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಬರುವ ಮೂಲಕ ವಿವಾದ ಸೃಷ್ಟಿಯಾಗಿತ್ತು. ನಂತರ ರಾಜ್ಯ, ದೇಶಾದ್ಯಂತ ಹಿಜಾಬ್​ ಪರ ಮತ್ತು ವಿರೋಧ ಪ್ರತಿಭಟನೆ, ಚರ್ಚೆಗಳು ನಡೆದಿದ್ದವು.

Share Post