ಸಮಾಜವಾದಿ ಪಕ್ಷದ ನಾಯಕನ ಮನೆ ಮೇಲೆ ಐಟಿ ರೇಡ್
ನವದೆಹಲಿ: ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ರಾಜೀವ್ ರೈ ಮನೆ ಹಾಗೂ ಕಚೇರಿಗಳ ಮೇಲೆ ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿನ ಮಾವು ಜಿಲ್ಲೆ ಹಾಗೂ ಹರಿಯಾಣದಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ರಾಜೀವ್ ಅವರು ಬೇನಾಮಿ ಆಸ್ತಿಗಳನ್ನು ಹೊಂದಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ರಾಜೀವ್ ರೈ ಪ್ರಭಾವಿ ರಾಜಕಾರಣಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ತಪಾಸಣೆ ನಡೆಸಲಾಗಿದೆ. ಈ ವೇಳೆ ಅನೇಕ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಈ ನಡುವೆ ಇದು ರಾಜಕೀಯ ಪ್ರೇರಿತ ದಾಳಿ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಸದ್ಯದಲ್ಲೇ ಚುನಾವಣೆ ನಡೆಯಲಿದೆ. ಇಂತಹ ಸಂದರ್ಭದಲ್ಲಿ ಆದಾಯ ತೆರಿಗೆ ದಾಳಿ ನಡೆಸಿ, ನಮ್ಮ ನಾಯಕರಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.