National

ರಾಜ್ಯಸಭೆ ವಿಪಕ್ಷ ನಾಯಕನಿಗೆ ಇಡಿ ಸಮನ್ಸ್‌; ವಿಚಾರಣೆಗೆ ಹಾಜರಾದರಾ ಖರ್ಗೆ..?

ನವದೆಹಲಿ; ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ರಾಜ್ಯಸಭೇ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್‌ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಖರ್ಗೆ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. 

   ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸಮನ್ಸ್​ ನೀಡಲಾಗಿತ್ತು. ಫೆಬ್ರವರಿಯಲ್ಲಿ ದೆಹಲಿ ಹೈಕೋರ್ಟ್ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪ್ರಕರಣದ ಇತರ ಆರೋಪಿಗಳ ಪ್ರತಿಕ್ರಿಯೆಯನ್ನು ಕೇಳಿತ್ತು. ನ್ಯಾಯಮೂರ್ತಿ ಸುರೇಶ್ ಕೈಟ್, ನೋಟಿಸ್ ನೀಡುವಾಗ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಯಂಗ್ ಇಂಡಿಯಾ (ವೈಐ)ಗೂ ನೋಟಿಸ್‌ ನೀಡಿತ್ತು.  ಏಪ್ರಿಲ್ 12 ರೊಳಗೆ ಸುಬ್ರಮಣಿಯನ್‌ ಸ್ವಾಮಿಯವರ ದೂರಿನ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಸೂಚಿಸಿತ್ತು.

    ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಅನ್ನು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (ವೈಐಎಲ್) ಸ್ವಾಧೀನಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್ ನಾಯಕರು ವಂಚನೆ ಮತ್ತು ನಂಬಿಕೆದ್ರೋಹದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು 2012 ರಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

Share Post