CrimeNational

ಸರ್ಕಾರಿ ಬಸ್‌ಗೆ ಖಾಸಗಿ ಬಸ್‌ ಡಿಕ್ಕಿ; ಒಂಬತ್ತು ಮಂದಿ ದಾರುಣ ಸಾವು..!

ತಿರುವನಂತಪುರ; ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಪಾಲಕ್ಕಾಡ್ ಜಿಲ್ಲೆಯ ವಡಕ್ಕಾಂಚೇರಿಯಲ್ಲಿ ನಡೆದಿದೆ. ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಸೇರಿ 9 ಮಂದಿ ಮೃತಪಟ್ಟಿದ್ದಾರೆ.

ನಿನ್ನೆ ತಡರಾತ್ರಿ 11.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳು ರಸ್ತೆಯಿಂದ ಪಕ್ಕಕ್ಕೆ ಸರಿದಿವೆ. ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮೃತಪಟ್ಟಿದ್ದಾರೆ. ಖಾಸಗಿ ಬಸ್‌ನ ಅತಿಯಾದ ವೇಗ ಮತ್ತು ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಕೆಎಸ್‌ಆರ್‌ಟಿಸಿ ಬಸ್ ಕೇರಳದ ಕೊಟ್ಟಾರಕ್ಕರದಿಂದ ತಮಿಳುನಾಡಿನ ಕೊಯಂಬತ್ತೂರಿಗೆ ತೆರಳುತ್ತಿತ್ತು. ಬಸ್‌ನಲ್ಲಿದ್ದ 81 ಪ್ರಯಾಣಿಕರ ಪೈಕಿ 3 ಮಂದಿ ಮೃತಪಟ್ಟಿದ್ದಾರೆ ಎಂದು ಸಚಿವ ಆಂಟೋನಿ ರಾಜು ಹೇಳಿದ್ದಾರೆ. ಖಾಸಗಿ ಬಸ್‌ನಲ್ಲಿ ಎರ್ನಾಕುಲಂನ ಬಸೆಲಿಯೋಸ್ ವಿದ್ಯಾನಿಕೇತನ ಶಾಲೆಯ 42 ವಿದ್ಯಾರ್ಥಿಗಳು ಮತ್ತು 5 ಶಿಕ್ಷಕರು ಪ್ರವಾಸಕ್ಕೆ ತೆರಳುತ್ತಿದ್ದರು.

Share Post