ಎಐಸಿಸಿ ಅಧ್ಯಕ್ಷರಾಗಿ ಪ್ರಮಾಣ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ; ಮೊನ್ನೆಯಷ್ಟೇ ಶಶಿ ತರೂರ್ ಅವರನ್ನು ಭಾರಿ ಅಂತರದಿಂದ ಸೋಲಿಸಿ ಚುನಾಯಿತರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣ ಪತ್ರ ನೀಡುವ ಮೂಲಕ ಅಧಿಕಾರಿವನ್ನು ಹಸ್ತಾಂತರ ಮಾಡಿದರು. ಈ ಮೂಲಕ 24 ವರ್ಷಗಳ ಬಳಿಕ ಗಾಂಧಿಯೇತರ ನಾಯಕ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಂತಾಯಿತು.
ನಾನು ಒಬ್ಬ ಕಾರ್ಮಿಕನ ಮಗ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಸೇರಿದ ನನ್ನನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಲಾಗಿದೆ. ನಾನು ಪಕ್ಷವನ್ನು ಸಂಘಟಿಸಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಖರ್ಗೆ ಭರವಸೆ ನೀಡಿದರು. ಬಿಕ್ಕಟ್ಟಿನ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಎಂದು ಸೋನಿಯಾಗಾಂಧಿಯವರು ಹೇಳಿದರು. ಅಧಿಕಾರ ಸ್ವೀಕಾರ ಮಾಡುವುದಕ್ಕೂ ಮೊದಲು ಮಲ್ಲಿಕಾರ್ಜುನ ಖರ್ಗೆ ಅವರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮಾಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದರು.