National

ರಾಷ್ಟ್ರಪತಿ ಚುನಾವಣೆ; ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿ ಯಶವಂತ ಸಿನ್ಹಾ..?

ನವದೆಹಲಿ; ಮುಂದಿನ ತಿಂಗಳ 18 ರಂದು ನಡೆಯುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ಯಶವಂತ ಸಿನ್ಹಾ ಅವರು ಇಂದು ಟ್ವೀಟ್‌ ಒಂದನ್ನು ಮಾಡಿದ್ದಾರೆ. ಆ ಟ್ವೀಟ್‌ನಲ್ಲಿ ಯಶವಂತ್ ಸಿನ್ಹಾ ಟಿಎಂಸಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಪ್ರತಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ವಿಶಾಲ ತಳಹದಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡುವ ಉದ್ದೇಶದಿಂದ ತಾವು ಪಕ್ಷ ತೊರೆಯುತ್ತಿರುವುದಾಗಿ ಯಶವಂತ್ ಸಿನ್ಹಾ ಹೇಳಿದ್ದಾರೆ. 

   ಬಿಜೆಪಿ ತೊರೆದು ಯಶವಂತ ಸಿನ್ಹಾ ಅವರು ಟಿಎಂಸಿ ಸೇರಿದ್ದರು. ಈಗ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಹೀಗಾಗಿ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳು ಅವರನ್ನೇ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಿವೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಇನ್ನು ಇದಕ್ಕೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೂಡಾ ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.

Share Post