ರಾಹುಲ್ ಅನರ್ಹತೆ ವಿಚಾರ; ತುರ್ತು ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ; ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆಯಾಗಿದ್ದರಿಂದ ಅವರನ್ನು ಸಂಸತ್ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಕಾರಣದಿಂದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತುರ್ತು ಸಭೆ ಕರೆದಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಈ ವಿಚಾರವಾಗಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಯಲಿದೆ.
ಸಂಜೆ 5.30ಕ್ಕೆ ಈ ಸಭೆ ನಡೆಯಲಿದೆ. ಸಭೆಯಲ್ಲಿ ವರ್ಚುಯಲ್ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಕೂಡಾ ಪಾಲ್ಗೊಳ್ಳಲಿದ್ದಾರೆ. ಇನ್ನೊಂದೆಡೆ ವಿಜಯ್ ಚೌಕ್‌ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಜನರು ಅಲ್ಲಿ ಸೇರುತ್ತಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.