Budeget session; ಗ್ಯಾರೆಂಟಿಗಳು ಇಡೀ ದೇಶಕ್ಕೆ ಮಾದರಿ; ರಾಜ್ಯಪಾಲ
ಬೆಂಗಳೂರು; ರಾಜ್ಯ ಸರ್ಕಾರದ ಗ್ಯಾರೆಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ವಿಧಾನ ಮಂಡಲ ಬಜೆಟ್ ಅಧಿವೇಶನದ ಜಂಟಿ ಸದನವನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ. ಅಧಿಕಾರಕ್ಕೆ ಬರುತ್ತಿದ್ದಂತೆ ಭರವಸೆಗಳನ್ನು ಈಡೇರಿಸುವ ಕೆಲಸ ಮಾಡುತ್ತಿದೆ. ಆರ್ಥಿಕ ಅಸಮಾನತೆ ಹೆಚ್ಚಿರುವುದರಿಂದ ರಾಜದಯ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಬಡವರಿಗೆ ಅನುಕೂಲ ಮಾಡಿಕೊಟ್ಟಿವೆ. ಬಡವರು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿದೆ ಎಂದು ರಾಜ್ಯಪಾಲರು ಹೇಳಿದರು.
ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಶಕ್ತಿ ಹಾಗೂ ಗೃಹಜ್ಯೋತಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ. ಇದರಿಂದಾಗಿ ಬಡವರಿಗೆ ತೃಪ್ತಿ ತಂದಿದೆ. ಆರ್ಥಿಕ ಅಸಮಾನತೆ ಹೋಗಲಾಡಿಸಿ ಬಡವರು ಕೂಡಾ ಸಬಲರಾಗಲು ಇದರಿಂದ ಅನಕೂಲವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಆದ್ರೆ ಜನರ ಬದುಕಿಗೆ, ರಾಜ್ಯದ ಅಭಿವೃದ್ಧಿಗೆ ಗ್ಯಾರೆಂಟಿ ಮಾತ್ರ ಸಾಕಾಗುವುದಿಲ್ಲ. ಇದರ ಅರಿವು ಕೂಡಾ ಸರ್ಕಾರಕ್ಕಿದೆ. ಗ್ಯಾರೆಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬರಲು ಸಾಧದಯವಾಗುತ್ತಿದೆ. ಸರ್ಕಾರದ ಒಂದು ನಿರ್ಧಾರದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ತಲುಪಲು ಅನುಕೂಲವಾಗುತ್ತದೆ ಎಂದು ರಾಜ್ಯಪಾಲರು ಹೇಳಿದರು.
ರಾಜ್ಯ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿದೆ. ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳ ರಾಜ್ಯಕ್ಕೆ ಹರಿದು ಬಂದಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು.
ಇತ್ತೀಚಿನ ವರ್ಷಗಳಲ್ಲಿ ಬಜೆಟ್ನಲ್ಲಿ ಘೋಷಿಸಿದ ಒಟ್ಟು ಘೋಷಣೆಗಳಲ್ಲಿ ಶೇಕಡ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿರುವುದು ದಾಖಲೆಯ ಸಂಗತಿ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.