ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್; ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆಗೆ ಕೋರಿಕೆ
ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು.
ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದರು. ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋದಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿರುವ ಕುರಿತು ಸಹ ಕೇಂದ್ರ ಸಚಿವರ ಗಮನ ಸೆಳೆದ ಲಕ್ಷ್ಮೀ ಹೆಬ್ಬಾಳಕರ್, ಕೂಡಲೆ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಕೋರಿದರು.
ಜೊತೆಗೆ, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ ಕ್ಲಾಸ್ ರೂಂ ಆಗಿ ಪರಿವರ್ತಿಸಲು ಸಹ ಲಕ್ಷ್ಮೀ ಹೆಬ್ಬಾಳಕರ್ ಸ್ಮೃತಿ ಇರಾನಿ ಬಳಿ ಮನವಿ ಮಾಡಿದರು.
ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ಮೃತಿ ಇರಾನಿ, ತಕ್ಷಣ ಎಲ್ಲವುಗಳಿಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಮತ್ತು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಈ ಸಂದರ್ಭದಲ್ಲಿ ಇದ್ದರು.