ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ, ಮುಂದಿನ ಚುನಾವಣೆವರೆಗೂ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಎಂದು ಸ್ಪಷ್ಟಪಡಿಸಿದರು.
ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಚುನಾವಣೆವರೆಗೂ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿರಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವೆಲ್ಲ ಒಟ್ಟಾಗಿ ಕಾರ್ಯ ನಿರ್ವಹಿಸುತ್ತೇವೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಹಾಗೂ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತೇವೆ. ಸಿಎಂ ಬದಲಾವಣೆ ಕೇವಲ ಊಹಾಪೋಹ, ಕಪೋಕಲ್ಪಿತ ಕತೆ, ಯಾರೂ ಕೂಡ ಇದನ್ನು ನಂಬುವ ಅವಶ್ಯಕತೆ ಇಲ್ಲ. ಬೊಮ್ಮಾಯಿ ಅವರು ಪೂರ್ಣ ಅವಧಿವರೆಗೆ ಸರ್ಕಾರವನ್ನು ನಡೆಸಲಿದ್ದಾರೆ ಎಂದರು.
ಇನ್ನು ರಾಜ್ಯ ಬಿಜೆಪಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಸಚಿವ ಪುನರ್ ರಚನೆಯೂ ಇಲ್ಲ. ವಿವಿಧ ಕಾರಣಕ್ಕೆ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳುವ ಕೆಲಸವನ್ನು ಮಾತ್ರ ಮಾಡುತ್ತೇವೆ ಎಂದರು.