ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಕೇಸ್‌ಗಳ ಹೆಚ್ಚಳ; ಶಾಲೆಗಳಿಗೆ ಮತ್ತೆ ಬೀಗ ಸಾಧ್ಯತೆ
ಮುಂಬೈ: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಒಬ್ಬರಿಂದ ಒಬ್ಬರಿಗೆ ಒಮಿಕ್ರಾನ್ ಸೋಂಕು ಹರಡುವ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಶಾಲೆಗಳನ್ನು ಮುಚ್ಚಲು ಚಿಂತನೆ ನಡೆಸಲಾಗುತ್ತಿದೆ. ಪರಿಸ್ಥಿತಿ ಅವಲೋಕನ ಮಾಡುತ್ತಿದ್ದು, ಅವಶ್ಯಕತೆ ಬಿದ್ದರೆ ಶಾಲೆಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮಹಾರಾಷ್ಟ್ರ ಶಿಕ್ಷಣ ಸಚಿವ ವರ್ಷಾ ಏಕನಾಥ್ ಗಾಯಕ್ವಾಡ್ ಹೇಳಿದ್ದಾರೆ.
ದೇಶದಲ್ಲಿ ಇದುವರೆಗೆ 213 ಒಮಿಕ್ರಾನ್ ಕೇಸ್‌ಗಳು ಪತ್ತೆಯಾಗಿವೆ. ದೆಹಲಿ ಮತ್ತು ಮುಂಬೈನಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ದೆಹಲಿಯಲ್ಲಿ 57 ಕೇಸ್‌ಗಳು ಪತ್ತೆಯಾದರೆ, ಮುಂಬೈನಲ್ಲಿ 53 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಪೋಷಕರಲ್ಲಿ ಭೀತಿ ಶುರುವಾಗಿದೆ. ಕೆಲ ಪೋಷಕರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಮಹಾರಾಷ್ಟ್ರ ಸರ್ಕಾರ ಮತ್ತೆ ಶಾಲೆಗಳನ್ನು ಮುಚ್ಚುವುದಕ್ಕೆ ಚಿಂತನೆ ನಡೆಸಿದೆ.